ದಾವಣಗೆರೆ ಆ. 12
ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ “ಆರೂಡ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ” ಹಾಗೂ ‘ತರಳಬಾಳು ವೃತ್ತ’ ನಾಮಕರಣ ಕಾರ್ಯಕ್ರಮ ಆ. 13 ರಂದು ಬೆಳಿಗ್ಗೆ 11 ಗಂಟೆಗೆ ಹದಡಿ ರಸ್ತೆಯ ಎಸ್.ಎಸ್. ಕಲ್ಯಾಣ ಮಂಟಪ ಆವರಣದಲ್ಲಿ ಜರುಗಲಿದೆ.
ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹದಡಿ ರಸ್ತೆ ಮೂಲಕ ರಾಷ್ಟ್ರೀಯ ಹೆದ್ದಾರಿ 4 ಕ್ಕೆ ಸೇರುವ ರಸ್ತೆಗೆ “ಆರೂಡ ದಾಸೋಹಿ ಶರಣ ಮಾಗನೂರು ಬಸಪ್ಪ ರಸ್ತೆ” ಎಂದು ಹಾಗೂ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದ ಮುಂಭಾಗದಲ್ಲಿ ವೃತ್ತ ನಿರ್ಮಿಸಿದ್ದು, ಈ ವೃತ್ತಕ್ಕೆ “ತರಳಬಾಳು ವೃತ್ತ” ಎಂದು ನಾಮಕರಣ ಮಾಡುವ ಕಾರ್ಯಕ್ರಮ ಆ. 12 ರಂದು ಹಮ್ಮಿಕೊಳ್ಳಲಾಗಿದೆ.
ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಅವರು ನಾಮಫಲಕಗಳ ಅನಾವರಣ ಮಾಡಲಿದ್ದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಶಾಮನೂರು ಶಿವಶಂಕರಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರ ಬಿ.ಜಿ. ಅಜಯಕುಮಾರ್ ಅಧ್ಯಕ್ಷತೆ ವಹಿಸುವರು. ಉಪ ಮಹಾಪೌರರಾದ ಸೌಮ್ಯ ಎಸ್. ನರೇಂದ್ರಕುಮಾರ್ ಸೇರಿದಂತೆ ಹಲವು ಗಣ್ಯರು, ಉನ್ನತ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.