ದಾವಣಗೆರೆ ಸೆ.19
ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್ ರೋಗಿಗಳಿಗೆ ಸರ್ಕಾರದ ಎಬಿಎಆರ್‍ಕೆ ಯೋಜನೆಯಡಿ ವೈದ್ಯಕಿಯ ವೆಚ್ಚ ಭರಿಸಲಾಗುವುದು. ಜಿಲ್ಲೆಯಲ್ಲಿ ಸದ್ಯ 2874 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈವರೆಗೆ 10733 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದುವರೆಗೆ 13834 ಕೋವಿಡ್ ಪಾಸಿಟೀವ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10733 ಜನ ಗುಣಮುಖರಾಗಿದ್ದಾರೆ. ಒಟ್ಟು 227 ಜನ ಮೃತಪಟ್ಟಿದ್ದು, ಸದ್ಯ ಜಿಲ್ಲೆಯಲ್ಲಿ 2874 ಸಕ್ರಿಯ ಕೋವಿಡ್ ಪ್ರಕರಣಗಳು ಇವೆ. ಇದರಲ್ಲಿ 1679 ಜನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ, ಉಳಿದವರು ಮನೆಗಳಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಪ್ರತ್ಯೇಕ ವ್ಯವಸ್ಥೆ ಇರುವವರಿಗೆ ಮಾತ್ರ ಮನೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ಆದಷ್ಟೂ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್‍ಗಳಲ್ಲಿಯೇ ದಾಖಲಾಗುವಂತೆ ಶಿಫಾರಸು ಮಾಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 37 ಜನ ಐಸಿಯು ನಲ್ಲಿ ಹಾಗೂ 16 ಜನ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯ 03 ಪ್ರಯೋಗಾಲಯಗಳಲ್ಲಿ ಕೋವಿಡ್ ಪತ್ತೆ ನಡೆಸಲಾಗುತ್ತಿದ್ದು, ದಿನಕ್ಕೆ ಸುಮಾರು 800 ಮಾದರಿಗಳ ಪರೀಕ್ಷೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ದಿನಕ್ಕೆ ಕನಿಷ್ಟ 2500 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಚನ್ನಗಿರಿ ಶಾಸಕರು ಹಾಗೂ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ನಿಗಮದ ಅಧ್ಯಕ್ಷ ಮಾಡಾಳು ವಿರುಪಾಕ್ಷಪ್ಪ ಅವರು ಮಾತನಾಡಿ, ರೈತರು, ಬಡವರು ಕೋವಿಡ್ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದಲ್ಲಿ ಅವರಿಗೆ ವೈದ್ಯಕೀಯ ವೆಚ್ಚ ಭರಿಸಲು ತೊಂದರೆಯಾಗುತ್ತಿದೆ. ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಸೂಕ್ತ ಮಾಹಿತಿ ಹಾಗೂ ಚಿಕಿತ್ಸೆ ದೊರಕಿಸಲು ಸಮರ್ಪಕ ವ್ಯವಸ್ಥೆ ಕೈಗೊಳ್ಳಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕೋವಿಡ್‍ಗೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡುವ ರೋಗಿಗಳಿಗೆ ಮಾತ್ರ ಎಬಿಎಆರ್‍ಕೆ ಯೋಜನೆಯಡಿ ವೈದ್ಯಕೀಯ ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Leave a Reply

Your email address will not be published. Required fields are marked *