ದಾವಣಗೆರೆ ಜ. 19
ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ. 25 ರಂದು ಜಿಲ್ಲಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರತಿ ಮತಗಟ್ಟೆವಾರು ಯುವ ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಯೋಜಿಸುವ ಕುರಿತು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಈ ಬಾರಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಅನ್ವಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಂಡು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಾದ್ಯಂತ ಆಯೋಜಿಸಬೇಕು. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಅಲ್ಲದೆ ಪ್ರತಿ ಮತಗಟ್ಟೆವಾರು ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜ. 25 ರಂದು ಪದವಿ ಹಂತದ ವಿದ್ಯಾರ್ಥಿಗಳಿಂದ ಜಾಗೃತಿ ಘೋಷಣೆಗಳೊಂದಿಗೆ ಪ್ರಭಾತಫೇರಿ ನಡೆಸಬೇಕು. ಮತಗಟ್ಟೆ ಅಧಿಕಾರಿಗಳ ಸಹಯೋಗದಲ್ಲಿ ಫೋನ್‍ಇನ್ ಕಾರ್ಯಕ್ರಮ, ಸಾಂಸ್ಕøತಿಕ ತಂಡಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಇದೇ ಜ. 25 ರ ಬಳಿಕ ಮತದಾರರ ಗುರುತಿನ ಚೀಟಿ ಇ-ಎಪಿಕ್ (ಇ-eಠಿiಛಿ) ರಾಜ್ಯ ಚುನಾವಣಾ ಆಯೋಗ ಹಾಗೂ ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿ ಲಭ್ಯವಾಗಲಿದ್ದು, ಗುರುತಿನ ಚೀಟಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ಬಳಸಿಕೊಂಡು ಇ-ಎಪಿಕ್ ಪಡೆಯಬಹುದಾಗಿದೆ. ಎಂದು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ಎನ್‍ಸಿಸಿ, ಎನ್‍ಎಸ್‍ಎಸ್, ಸ್ವಯಂ ಸೇವಾ ತಂಡಗಳನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮ ನಡೆಸಬೇಕು. ಚುನಾವಣಾ ಆಯೋಗ ಅನುಮೋದಿಸಿರುವ ಪ್ರಚಾರ ಸಾಮಗ್ರಿಯನ್ನು ಮಾತ್ರ ಬಳಸಿಕೊಳ್ಳಬೇಕು, ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಅಲ್ಲದೆ ಸಾಮಾಜಿಕ ಜಾಲತಾಣಗಳ ಮೂಲಕವೂ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ 1949 ಮತಗಟ್ಟೆಗಳಲ್ಲಿಯೂ ಬಿಎಲ್‍ಒ ಗಳು ರಾಷ್ಟ್ರೀಯ ಮತದಾರರ ದಿನಾಚರಣೆ ಆಯೋಜಿಸಬೇಕು. ಪ್ರತಿ ಗ್ರಾಮಗಳ ಯುವ ಮತದಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ನೂತನ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ವಿತರಣೆ, ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಕೈಗೊಳ್ಳಬೇಕು. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಿರುವ ಯುವಕರು, ಮಹಿಳೆಯರು, ವಿಕಲಚೇತನರನ್ನು ಮತದಾರರ ಪಟ್ಟಿಗೆ ನೊಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸುವ ಸಂಬಂಧ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ವಿವರಗಳನ್ನು ಯೋಜನೆ ಸಹಿತ ಜ. 20 ರ ಒಳಗಾಗಿ ಅಲ್ಲದೆ ಕಾರ್ಯಕ್ರಮದ ಅನುಷ್ಠಾನ ಬಳಿಕ, ಆಯೋಜನೆ ಕುರಿತ ಫೋಟೋ, ಪತ್ರಿಕಾ ವರದಿಯೊಂದಿಗೆ ವಿವರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಚುನಾವಣಾ ತಹಸಿಲ್ದಾರ್ ಎಸ್.ಎ. ಪ್ರಸಾದ್, ಮಹಾನಗರಪಾಲಿಕೆಯ ಮತದಾರರ ನೊಂದಣಾಧಿಕಾರಿ ಚಂದ್ರಪ್ಪ, ಸಹಾಯಕ ಪರಿಷತ್ ಕಾರ್ಯದರ್ಶಿ ಜಯಣ್ಣ ಸೇರಿದಂತೆ ತಹಸಿಲ್ದಾರರು, ಮತದಾರರ ಸಾಕ್ಷರತಾ ಕ್ಲಬ್‍ಗಳ ಸಂಯೋಜಕರು ಭಾಗವಹಿಸಿದ್ದರು

Leave a Reply

Your email address will not be published. Required fields are marked *