ಕಾಂಗ್ರೆಸ್ ಸಿದ್ಧಾಂತ, ನಾಯಕತ್ವ ಒಪ್ಪುವ ಯಾರೂ ಬೇಕಾದರೂ ಪಕ್ಷ ಸೇರಲು ಅರ್ಜಿ ಹಾಕಬಹುದು; ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ, ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು. ನಾನು ಕೇವಲ 17 ಜನರನ್ನು ಉದ್ದೇಶಿಸಿ ಈ ಮಾತು ಹೇಳುತ್ತಿಲ್ಲ. ಯಾರೇ ಅರ್ಜಿ ಹಾಕಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ‘ಯಾರು ಕಾಂಗ್ರೆಸ್ ಸಿದ್ಧಾಂತ, ನಾಯಕತ್ವ ನಂಬಿ ಪಕ್ಷ ಸೇರಲು ಬಯಸುತ್ತಾರೋ ಅವರು ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿಗೆ ಅರ್ಜಿ ಹಾಕಲಿ. ಅವರು ಪರಿಶೀಲಿಸಿ, ಯಾರನ್ನು ತೆಗೆದುಕೊಳ್ಳಬೇಕು, ಯಾರನ್ನು ತೆಗೆದುಕೊಳ್ಳಬಾರದು ಅಂತಾ ನಿರ್ಧರಿಸುತ್ತಾರೆ ಎಂದರು.

ಮುಂದೆ ಯಾವುದೇ ಗೊಂದಲ ಉದ್ಭವಿಸಬಾರದು ಎಂದು ನಾವು ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, ಆನಂತರ ರಾಜ್ಯಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಯಾರಿಗೆ ಇಚ್ಛೇ ಇದೆಯೋ ಅವರು ಅರ್ಜಿ ಹಾಕಲಿ, ಆಮೇಲೆ ಆ ಬಗ್ಗೆ ತೀರ್ಮಾನ ಮಾಡೋಣ.

ನಮ್ಮಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಅಭಿಪ್ರಾಯ ಇರುತ್ತದೆ. ಇಲ್ಲಿ ವೈಯಕ್ತಿಕ ಅಭಿಪ್ರಾಯ ಮುಖ್ಯ ಅಲ್ಲ. ಪಕ್ಷದ ಒಟ್ಟಾರೆ ಅಭಿಪ್ರಾಯ ಮುಖ್ಯ. ಪಕ್ಷ ತೊರೆದು ಮಂತ್ರಿಯಾಗಿರುವ 17 ಜನರಲ್ಲಿ ಯಾರೂ ಪಕ್ಷ ಸೇರುವ ಬಗ್ಗೆ ಸಂಪರ್ಕ ಮಾಡಿಲ್ಲ. ನಾನು ಕೇವಲ ಈ 17 ಜನರನ್ನು ಉದ್ದೇಶಿಸಿ ಮಾತ್ರ ಈ ಮಾತು ಹೇಳುತ್ತಿಲ್ಲ. ಯಾರು ಬೇಕಾದರೂ ಅರ್ಜಿ ಹಾಕಬಹುದು. ನೀವು ಬೇಕಾದದರೂ ಅರ್ಜಿ ಹಾಕಿ ಎಂದು ಹೇಳಿದರು.

ರಾಜಕೀಯದಲ್ಲಿ ಬೆನ್ನಿಗೆ ಚೂರಿ ಹಾಕುವ ಕೆಲಸ ನಿತ್ಯ ನಡೆಯುತ್ತಿರುತ್ತದೆ. ಇದು ಕೇವಲ ಡಿ.ಕೆ. ಶಿವಕುಮಾರ್ ಅಥವಾ ಕಾಂಗ್ರೆಸ್ ಪಕ್ಷ ಅಂತ ಅಲ್ಲ, ಎಲ್ಲ ಪಕ್ಷದಲ್ಲೂ ಇಂತಹ ಉದಾಹರಣೆಗಳನ್ನು ನೋಡಿದ್ದೇವೆ. ಪ್ರತಾಪಗೌಡ ಪಾಟೀಲ್ ಅವರನ್ನು ನಾವು ಬಿಜೆಪಿಯಿಂದಲೇ ಕರೆ ತಂದಿದ್ದೆವು. ಹೀಗೆ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವುದು, ಮರಳುವುದು ರಾಜಕೀಯದಲ್ಲಿ ಸಾಮಾನ್ಯ ಎನ್ನುವ ಮೂಲಕ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಶಾಸಕರಿಗೂ ಪರೋಕ್ಷವಾಗಿ ಆಹ್ವಾನಿಸಿದರು.

ಡಿ ಕೆ ಶಿವಕುಮಾರ್

Leave a Reply

Your email address will not be published. Required fields are marked *