ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿ ಹಾಗೂ ಗಾಂಧಿ ಪಾರ್ಕ್ನ ಪ್ರವೇಶ ದ್ವಾರದಲ್ಲಿ ಮೂರು ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಪಂಚಾಯತ್ರಾಜ್, ಗ್ರಾಮೀಣಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ವಿವರಗಳನ್ನು ನೀಡಿದ ಅವರು, ಸದರಿ ಪುತ್ಥಳಿ ಅನಾವರಣಗೊಳಿಸಲು ಇರಬಹುದಾದ ಎಲ್ಲಾ ತೊಡಕುಗಳನ್ನು ನಿವಾರಿಸಲಾಗಿದೆ. ಈ ಪುತ್ಥಳಿ ಅನಾವರಣಗೊಳಿಸುವ ಸಂಬಂಧ ಇತ್ತೀಚೆಗೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಜುಲೈ 24ರಂದು ಬೆಳಿಗ್ಗೆ 10.30ಕ್ಕೆ ಮಾನ್ಯ ಮುಖ್ಯಮಂತ್ರಿಗಳು ವರ್ಚ್ಯುವಲ್ ಮೀಡಿಯಾ ಮುಖಾಂತರ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ. ಅಂದು ನಡೆಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಧರ್ಮಗಳ ಮುಖಂಡರುಗಳನ್ನು ಆಹ್ವಾನಿಸಲಾಗುವುದು ಎಂದವರು ನುಡಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ., ಚನ್ನಬಸಪ್ಪ, ಜ್ಞಾನೇಶ್ವರ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.