ಶಿವಮೊಗ್ಗ, ಆಗಸ್ಟ್ 28 ಮುಂದಿನ 30ವರ್ಷಗಳಲ್ಲಿ ಆಗಬಹುದಾದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ತಾಲೂಕಿನ ಆಯನೂರು ಮತ್ತು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 11ಗ್ರಾಮಗಳಿಗೆ ಅಂದಾಜು 10ಕೋಟಿ ರೂ.ಗಳ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಗೌಡನಕೆರೆಯಿಂದ ಕೋಹಳ್ಳಿ ಮತ್ತು ಆಯನೂರು ಗ್ರಾಮ ಪಂಚಾಯಿತಿಯ ಮನೆಮನೆಗೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ದೇಶದ ಎಲ್ಲಾ ಗ್ರಾಮೀಣ ಮನೆಮನೆಗೆ ನೀರು ತಲುಪಿಸುವುದು ಪ್ರಧಾನಿ ಮೋದೀಜಿಯವರ ಕನಸು ಸಾಕಾರಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ರಾಷ್ಟ್ರೀಯ ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ಮನೆಮನೆಗೆ ಗಂಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದ ಅವರು, ಪ್ರಕೃತಿಯ ನೀರನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ, ಅಗತ್ಯಕ್ಕೆ ತಕ್ಕಂತೆ ಸದ್ವಿನಿಯೋಗ ಮಾಡಿಕೊಳ್ಳುವುದಲ್ಲದೆ ಭುವಿಯಲ್ಲಿ ಇಂಗಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಲಾಗುವುದು ಎಂದರು.
ಮಾತ್ರವಲ್ಲ ರಾಜ್ಯದ ಪ್ರತಿ ಗ್ರಾಮಕ್ಕೆ ನೀರು, ಶೌಚಾಲಯ, ನರೇಗಾ ಯೋಜನೆಯಡಿ ಆಸಕ್ತರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶ, ವಸತಿ ರಹಿತರಿಗೆ ಸೂರು ಒದಗಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು ಆಯನೂರಿಗೆ ಸಮೀಪವಾಗಿರುವ ಸಿರಿಗೆರೆ ಗ್ರಾಮಕ್ಕೂ ನೀರನ್ನು ಒದಗಿಸುವಂತೆ ಅಲ್ಲಿನ ಜನರ ಬೇಡಿಕೆ ಇದ್ದು, ಸಂಬಂಧಿಸಿದ ಅಧಿಕಾರಿಗಳಿಂದ ಸಮೀಕ್ಷೆ ಮಾಡಿಸಿ, ಸಾಧ್ಯವಾದಲ್ಲಿ ನೀರನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಅಕ್ಟೋಬರ್ ಮಾಹೆಯವರೆಗೆ ಪಡಿತರಚೀಟಿದಾರರಿಗೆ ಉಚಿತವಾಗಿ ಆಹಾರ ಮತ್ತು ದೇಶದ ಎಲ್ಲಾ ನಾಗರೀಕರಿಗೂ ಉಚಿತವಾಗಿ ಲಸಿಕೆ ನೀಡುವ ಸಂಕಲ್ಪ ಮಾಡಿರುವ ದೇಶದ ಪ್ರಧಾನಿ ಮೋದಿಯವರು ಹಾಗೂ ಸಂಪುಟದ ಸಚಿವರು ಅಭಿನಂದನಾರ್ಹರು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಗೌಡನಕೆರೆಯಿಂದ 2ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ನೀರು ಒದಗಿಸುವ ಕಾರ್ಯ ಯಾವುದೇ ವಿಳಂಬಕ್ಕೆ ಅವಕಾಶವಿಲ್ಲದೆ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದರು.
ಈ ಯೋಜನೆಯಡಿ ಗೌಡನಕೆರೆಯಿಂದ ಸುಮಾರು 3.24ಕಿ.ಮೀ. ಉದ್ದದ ಕೊಳವೆ ಮಾರ್ಗವನ್ನು ಅಳವಡಿಸಲಾಗುವುದಲ್ಲದೇ ಶುದ್ಧ ನೀರಿನ ಘಟಕದಲ್ಲಿ 2.50.000ಲೀ. ಸಾಮಥ್ರ್ಯದ ನೀರಿನ ಟ್ಯಾಂಕನ್ನು ನಿರ್ಮಿಸಲಾಗುವುದು ಎಂದ ಅವರು, ಆಯನೂರು ಸುತ್ತಮುತ್ತಲ ಪ್ರದೇಶದಲ್ಲಿರುವ ಎಲ್ಲಾ ಮಂದಿರ, ಮಸೀದಿಗಳ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಸರ್ಕಾರದಿಂದ ಮಂಜೂರು ಮಾಡಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸುವಲ್ಲಿ ಅನೇಕ ನೀರಾವರಿ ಯೋಜನೆಗಳು ಚಾಲನೆಯಲ್ಲಿವೆ. ಸುಮಾರು 1500ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಮಾತನಾಡಿ, ಈ ಭಾಗದಲ್ಲಿ ಆಗಾಗ್ಗೆ ಕಂಡುಬರುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ. ಅಲ್ಲದೇ ಆಯನೂರಿನಲ್ಲಿ ಸುಮಾರು 1.00ಕೋಟಿ ರೂ.ಗಳ ವೆಚ್ಚದಲ್ಲಿ ಸುಸಜ್ಜಿತ ಬಸ್‍ನಿಲ್ದಾಣವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಸರ್ಕಾರದಿಂದ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಕೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರ ನಾಯ್ಕ್, ಆಯನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.