ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೋವಿಡ್ ಮಾರ್ಗಸೂಚಿಗಳನ್ನು ಮುಂದುವರೆಸಿದ್ದು, ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂವನ್ನು ಅಕ್ಟೋಬರ್ 25 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಆದೇಶವನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಈ ಹಿಂದಿನ ಆದೇಶದ ಅನ್ವಯ ಅ.08 ಕ್ಕೆ ಮುಕ್ತಾಯವಾಗಿದೆ. ಇದರ ಬೆನ್ನಲ್ಲೆ ರಾತ್ರಿ ಕಫ್ರ್ಯೂ ಮುಂದುವರೆಸುವಂತೆ ಹೊಸ ಆದೇಶ ಹೊರಡಿಸಲಾಗಿದೆ. ಅ.25 ರ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ಈಗಾಗಲೇ ಸೂಚಿಸಿರುವ ಚಟುವಟುಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ.
ಸರ್ಕಾರದ ಮಾರ್ಗಸೂಚಿಗಳನ್ನು ಅಥವಾ ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ ಪಕ್ಷದಲ್ಲಿ ಅಂತಹ ವ್ಯಕ್ತಿಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.