ಶಿವಮೊಗ್ಗ, ಮಾರ್ಚ್ 15 ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಖುದ್ದು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿಯವರು ಗ್ರಾಮದ ಭೇಟಿ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯವೈಖರಿಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ದೇಶದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ವ್ಯವಸ್ಥೆಯ ಸುಧಾರಣೆ ಕುರಿತು ಸಂದೇಶ ನೀಡುವುದರ ಜೊತೆಗೆ ಸೂಕ್ತ ಸಲಹೆ ಮಾರ್ಗದರ್ಶನ ನೀಡುತ್ತಿರುವುದು ವಿಶೇಷ ಎಂದವರು ನುಡಿದರು.
ಅಲ್ಲದೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನದಲ್ಲಿರುವ ಯೋಜನೆಗಳ ಕುರಿತು ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅನೇಕ ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗಿದೆ. ಹೊಳಲೂರಿನಲ್ಲಿ ಉದ್ಯೋಗಖಾತ್ರಿ ಯೋಜನೆಯ ಪ್ರಗತಿ ಉತ್ತಮವಾಗಿದೆ. ಮಾರ್ಚ್ ಮಾಸಾಂತ್ಯದೊಳಗಾಗಿ ಮನೆಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾರ್ಯ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಅಂತೆಯೇ ಸಂಗ್ರಹವಾಗುವ ತ್ಯಾಜ್ಯವನ್ನು ಒಣ ಮತ್ತು ಹಸಿಕಸವನ್ನಾಗಿ ಬೇರ್ಪಡಿಸಿ, ಸಮರ್ಪಕವಾಗಿ ವಿಲೇವಾರಿ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮಹಿಳಾ ವಾಹನ ಚಾಲಕರಿಗೆ ತರಬೇತಿಯೊಂದಿಗೆ ವಾಹನ ನೀಡಿ, ಗ್ರಾಮದ ಸ್ವಚ್ಚತಾ ಕಾರ್ಯಕ್ಕೆ ನಿಯೋಜಿಸಿರುವುದು ವಿಶೇಷವಾಗಿದೆ. ಅಲ್ಲದೇ ಗ್ರಾಮಕ್ಕೆ ಸಮುದಾಯ ಶೌಚಾಲಯವನ್ನು ನಿರ್ಮಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ಈ ಶೌಚಾಲಯವು ಸದಾ ಬಳಕೆಯಲ್ಲಿರುವಂತೆ ಹಾಗೂ ಸ್ವಚ್ಚವಾಗಿರುವಂತೆ ನೋಡಿಕೊಳ್ಳಲು ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ ಎಂದರು.
- ಪಶುವೈದ್ಯ ಸೇವಾ ಇಲಾಖೆಯ ಸೇವೆ ನಿರಂತರವಾಗಿದೆ. ಸ್ವಸಹಾಯ ಗುಂಪುಗಳ ಆಸಕ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿಯನ್ನು ನೀಡಿ, ಬ್ಯಾಂಕುಗಳಿಂದ ಸಾಲಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ವಿದ್ಯಾವಂತೆ ನಿರುದ್ಯೋಗಿ ಮಹಿಳೆಯರಿಗೆ ನರ್ಸರಿ, ಹೊಲಿಗೆ ಮುಂತಾದ ತರಬೇತಿಗಳನ್ನು ನೀಡಲಾಗಿದೆ. ಡಿಜಿಟಲ್ ಲೈಬ್ರರಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಗ್ರಾಮ ಸಭೆ ನಡೆಸಿ, ಗ್ರಾಮಸ್ಥರಿಂದ ಇನ್ನಷ್ಟು ಅಹವಾಲುಗಳನ್ನು ಸ್ವೀಕರಿಸಿ, ಅವುಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುವುದು.
_ ಶ್ರೀಮತಿ ಎಂ.ಎಲ್.ವೈಶಾಲಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಶಿವಮೊಗ್ಗ. - ಹೊಳಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯರ ನೇಮಕಾತಿಗೆ ಕ್ರಮವಹಿಸಲಾಗಿದೆ. ಅಲ್ಲದೇ ರಾತ್ರಿಪಾಳಿ ಸೇವೆಗೆ ವೈದ್ಯರನ್ನು ಶೀಘ್ರದಲ್ಲಿ ನಿಯೋಜಿಸಲಾಗುವುದು. ಡಾ|| ರಾಜೇಶ್ ಸುರಗೀಹಳ್ಳಿ.
- ಮಳೆಕೊಯ್ಲು ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನ ಹೊಂದಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ನಿಗಧಿಪಡಿಸಿದ್ದ 13ಕೋಟಿ ಮಾನವ ದಿನಗಳ ಗುರಿಯನ್ನು ಮೀರಿ 16ಕೋಟಿ ಮಾನವ ದಿನಗಳ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ. – ಕೆ.ಎಸ್.ಈಶ್ವರಪ್ಪ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರು.
- ಶುದ್ಧ ಕುಡಿಯುವ ನೀರು, ಮೂಲಭೂತ ಸೌಕರ್ಯ, ಕೃಷಿ, ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪರಿಸರ ಸ್ನೇಹಿ ಕಾರ್ಯಕ್ರಮಗಳು, ಹಸಿವು ಮುಕ್ತ ಗ್ರಾಮ, ಮುಂತಾದ ವಿಷಯಗಳಲ್ಲಿ ರಾಜ್ಯದ ಸಾಧನೆಗಳ ಕುರಿತು ವಸ್ತುಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಿ, ಜನರಿಗೆ ಸಾಧನೆಗಳ ಮಾಹಿತಿ ಒದಗಿಸಲಾಗುವುದು.ಎಂದು ತಿಳಿಸುತ್ತಾ
- ಅತೀಕ್‍ಅಹ್ಮದ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹೇಳಿದರು. ಇದರ ಜೊತೆಗೆ
- ದೇಶದ ಪ್ರಧಾನಿ ನರೇಂದ್ರಮೋದಿಯವರ ಹೊಳಲೂರು ಭೇಟಿ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಂಸದ ಬಿ.ವೈ.ರಾಘವೇಂದ್ರ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅತೀಕ್‍ಅಹ್ಮದ್, ಆರ್.ಡಿ.ಪಿ.ಆರ್.ಆಯುಕ್ತ ಶ್ರೀಮತಿ ಶಿಲ್ಪಾನಾಗ್, ಕ್ರೆಡಿಲ್ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಳಲೂರಿಗೆ ಭೇಟಿ ನೀಡಿ ಪರಿಶೀಲಿಸಿದರು.