ಸಾಸ್ವೇಹಳ್ಳಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಮೂರು ಸಾವಿರ ಎಕರೆಗೂ ಅಧಿಕ ಪ್ರಮಾಣದ ಬೆಳೆ ಹಾನಿಯಾಗಿದ್ದು ಬೆಳೆ ಕಳೆದುಕೊಂಡ ಪ್ರತಿಯೊಬ್ಬರಿಗೂ ಸರ್ಕಾರದಿಂದ ಕೊಡಿಸುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಮಾವಿನಕೋಟೆ,ಕುಳಗಟ್ಟೆ, ಕ್ಯಾಸಿನಕರೆ,ಐನೂರು,ಬುಳ್ಳಾಪುರ, ಸಾಸ್ವೇಹಳ್ಳಿ,ರಾಂಪುರ, ಹೊಟ್ಯಾಪುರ,ಚಿಕ್ಕಬಾಸೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೆಳೆಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಮೂರು ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ,ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದರೇ, ಸುಮಾರು 100 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದರು. ಸಾಸ್ವೇಹಳ್ಳಿ ಹೋಬಳಿಯೊಂದರಲ್ಲೇ 13 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 84 ಎಕರೆ ಭತ್ತದ ಬೆಳೆ ಹಾನಿಯಾಗಿದೆ ಎಂದರು.
ಈಗಾಗಲೇ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದು ಅಧಿಕಾರಿಗಳು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಿದ್ದ ಪರಿಸುವಂತೆ ಸೂಚನೆ ನೀಡಿದ್ದೇನೆ ಎಂದ ರೇಣುಕಾಚಾರ್ಯ ನಾಳೆ ಅಧಿಕಾರಿಗಳ ಸಭೆ ಕರೆದಿದ್ದು ಅಧಿಕಾರಿಗಳಿಂದ ಮಳೆ ಹಾನಿಯ ಬಗ್ಗೆ ಸಮಗ್ರ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಉಂಟಾಗಿರುವ ಮಳೆ ಹಾನಿಯ ವರದಿ ಪಡೆದು ಮುಖ್ಯಮಂತ್ರಿಗಳ ಬಳಿ ತೆರಳಿ ಅವಳಿ ತಾಲೂಕಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಕ್ಯಾಸಿನಕೆರೆ ಗ್ರಾಮದಲ್ಲಿ ಮಳೆಯಿಂದಾಗಿ ಸೇತುವೆಗೆ ಹಾನಿಯಾಗಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದುರಸ್ಥಿ ಮಾಡಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಮುಖ್ಯಮಂತ್ರಿಗಳಿಗೆ ಪೋನ್ ಕರೆ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪೋನ್ ಕರೆ ಮಾಡಿ ಮಾತನಾಡಿದ ರೇಣುಕಾಚಾರ್ಯ ಅವಳಿ ತಾಲೂಕಿನಲ್ಲಿ ಮಳೆಯಿಂದಾದ ಹಾನಿಯ ಬಗ್ಗೆ ಮಾಹಿತಿ ನೀಡಿದರಲ್ಲದೇ ಅವಳಿ ತಾಲೂಕಿ ಸೂಕ್ತ ಪರಿಹಾರ ನೀಡುವಂತೆ ಸಿಎಂ ಬಳಿ ಮನವಿ ಮಾಡಿದರು.
ಕಳೆದ ಮೂರು ದಿನಗಳಿಂದ ನಿರಂತರ ಓಡಾಟ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಮಳೆಯಿಂದ ಸಾಕಷ್ಟು ಬೆಳೆ, ಮನೆಗಳಿಗೆ ಹಾನಿಯಾಗಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಖುದ್ದು ಪೀಲ್ಡಿಗಿಳಿದು ಓಡಾಟ ನಡೆಸುತ್ತಿದ್ದಾರೆ. ಅವಳಿ ತಾಲೂಕಿನಾಧ್ಯಂತ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಂದರ್ಭ ತಹಶೀಲ್ದಾರ್ ರಶ್ಮಿ, ಇಓ ರಾಮಬೋವಿ, ಲೋಕೋಪಯೋಗಿ ಎಇಇ ಗಂಗಪ್ಪ,ಕೃಷಿ ಅಧಿಕಾರಿ ಪ್ರತಿಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿದ್ದರು.