ಬೆಂಗಳೂರು:’ಪಿಎಸ್ಐ ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಸರ್ಕಾರದ ಒತ್ತಡಕ್ಕೆ ಮಣಿದು, ಪ್ರಬಲ ಅಧಿಕಾರಿ ಹಾಗೂ ರಾಜಕಾರಣಿಗಳಿಗೆ ಬೆಂಬಲವಾಗಿ ನಿಂತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಸಚಿವ ಅಶೋಕ್ ಕೂಡ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪ್ರಶ್ನಿಸಿದಾಗ ಉತ್ತರಿಸಿದ ಅವರು ಹೇಳಿದ್ದಿಷ್ಟು;
‘ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳೂ ಆಗಿದ್ದು, ತಮಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಚಿವರುಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ನೆಪ ಮಾತ್ರಕ್ಕೆ ಕೆಲವರನ್ನು ಬಂಧಿಸಿದರೆ ಸಾಲುವುದಿಲ್ಲ. ಎಲ್ಲ ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಸೆಕ್ಷನ್ 164 ಪ್ರಕಾರ ಹೇಳಿಕೆ ದಾಖಲಿಸಿಕೊಳ್ಳಬೇಕು. ಆಗ ಈ ರಾಜ್ಯಕ್ಕೆ ನ್ಯಾಯ ಸಿಗಲಿದೆ. ಇದರ ಜತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು.’ಎಂದು ಹೇಳಿದರು.