ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಿಸಲಾದ ದಾವಣಗೆರೆ ಕೆ.ಆರ್.ಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು.
ಈ ಶಾಲೆಯನ್ನು ನಿರ್ಮಿಸಿ 120 ವರ್ಷಗಳಾಗಿವೆ. ಈ ಶಾಲೆಯು ಪಾರಂಪರಿಕ ಶಾಲೆಯಾಗಿದ್ದು ಶಿಥಿಲಾವಸ್ಥೆಯಲ್ಲಿರುತ್ತದೆ. ಇದನ್ನು ಪುನಶ್ಚೇತನ ಮಾಡುವ ಮೂಲಕ ಇದೇ ಕಟ್ಟಡವನ್ನು ಉಳಿಸಿಕೊಳ್ಳಬೇಕೋ ಅಥವಾ ಇಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕೆನ್ನುವ ಬಗ್ಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಸಂಪೂರ್ಣ ವರದಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಲ್ಲಿಸಲು ಸೂಚನೆ ನೀಡಿದರು.
ಹಳೇ ಶಾಲೆಯನ್ನು ಹಾಗೆಯೇ ಉಳಿಸಿಕೊಳ್ಳಬೇಕೋ ಅಥವಾ ಹೊಸದಾಗಿ ನಿರ್ಮಾಣ ಮಾಡಬೇಕೆನ್ನುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಿದರು.
ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.