ದಾವಣಗೆರೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ನೀಡಿರುವ ಕೊಡುಗೆ ಬೇರೆ
ರಾಜ್ಯಗಳಿಗೆ ನೀಡಿಲ್ಲ. ಈ ಆಯವ್ಯಯ ಈ ಎರಡು ರಾಜ್ಯಗಳಿಗೆ ಸೀಮಿತವಾಗಿದೆ. ಹಾಗಾಗಿ ಇದೊಂದು ನಿರಾಸೆಯ ಬಜೆಟ್ ಎಂದು ಅಖಿಲ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದ್ರೆ, ಎಲ್ಲವೂ ಹುಸಿಯಾಗಿದೆ. ಮೊದಲಿನಿಂದಲೂ ಕರ್ನಾಟಕಕ್ಕೆ ಅನ್ಯಾಯ ಮಾಡಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಅದು ಮುಂದುವರಿದಿದೆ. ಕೇಂದ್ರ ಸರ್ಕಾರ ರಚನೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿರುವ ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಆದ್ರೆ, ಉಳಿದ ರಾಜ್ಯಗಳಿಗೆ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭೆಗೆ ಕಳುಹಿಸಿದ್ದು ಕರ್ನಾಟಕ. ಆದ್ರೆ, ರಾಜ್ಯಕ್ಕೆ ಕೊಡುಗೆ ನೀಡುವುದಿರಲಿ, ಈ ಹಿಂದೆ ಮಂಡನೆ ಮಾಡಿದ್ದ ಬಜೆಟ್ ನಲ್ಲಿ ಘೋಷಿಸಲಾಗಿದ್ದ ಕಾರ್ಯಕ್ರಮಗಳು ಅನುಷ್ಠಾನಗೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ನೀಡುವುದಾಗಿ ಬಜೆಟ್ ನಲ್ಲಿಯೇ ಘೋಷಣೆ ಮಾಡಲಾಗಿತ್ತು. ಆದ್ರೆ, ಇದುವರೆಗೆ ಯಾಕೆ ಹಣ ಬಿಡುಗಡೆ ಮಾಡಿಲ್ಲ. ಇದನ್ನು ನೋಡಿದರೆ ಕೇವಲ ಘೋಷಣೆಗಷ್ಟೇ ಸೀಮಿತ ಎಂಬಂತಾಗಿದೆ. ಮೊದಲು ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡಲಿ. ಇಲ್ಲಿಂದ ಲೋಕಸಭೆಗೆ ಆಯ್ಕೆಯಾಗಿ ಹೋಗಿರುವ ಬಿಜೆಪಿ ಸಂಸದರು ಯಾಕೆ ಈ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಶ್ನಿಸಲಿ ಎಂದು ಹೇಳಿದ್ದಾರೆ.
ಚಿನ್ನ, ಬೆಳ್ಳಿ, ಮೊಬೈಲ್, ಮೊಬೈಲ್ ಚಾರ್ಜರ್ ಸೇರಿದಂತೆ ಹಲವು ದರಗಳ ಕಡಿಮೆ ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಹೆಚ್ಚೇನೂ ಆಗಿಲ್ಲ. ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಹಳೇ ಮದ್ಯ ಹೊಸ ಬಾಟೆಲ್ ಎಂಬಂತೆ ಬಜೆಟ್ ಇದೆ ಎಂದು ವಿಶ್ಲೇಷಣೆ ಮಾಡಿದ್ದಾರೆ.