ನ್ಯಾಮತಿ:ತಾಲ್ಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಸರ್ವೆ ನಂ 32ರಲ್ಲಿ ಸಿವಿಲ್ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಮಂಜೂರು ಮಾಡಿರುವುದನ್ನು ರದ್ದುಪಡಿಸಿಬೇಕು ಎಂದು ಆಗ್ರಹಿಸಿ ಗ್ರಾಮದ ಸಾರ್ವಜನಿಕರು ನೂರಾರು ಕುರಿ ಹಿಂಡಿನೊಂದಿಗೆ ಸೋಮವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಕಳೆದ 35 ವರ್ಷಗಳಿಂದ ಗ್ರಾಮಸ್ಥರು ಈ ಗೋಮಾಳವನ್ನು ಬಳಸುತ್ತಿದ್ದಾರೆ. 2016-17ನೇ ಸಾಲಿನಲ್ಲಿ ನಿವೇಶನಕ್ಕಾಗಿ ರೈತರು ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಹಾಕಿದ್ದರು. ಕಳೆದ ಆರು ತಿಂಗಳ ಹಿಂದೆ ನಡೆದ ಗ್ರಾಮಸಭೆಯಲ್ಲಿ 300 ಜನರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಗ್ರಾಮದಲ್ಲಿ ಅಂದಾಜು 5 ಸಾವಿರ ಕುರಿ ಜಾನುವಾರುಗಳಿದ್ದು. ಈ ಮಾಹಿಯ ಎಲ್ಲಾ ಗೊತ್ತಿದ್ದರೂ ಜನ ಸಾಮಾನ್ಯರಿಗೆ ಮಾಹಿತಿ ನೀಡದೆ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಾಗವನ್ನು ಗುರುತಿಸಿದ್ದಾರೆ. ಇದಕ್ಕೆ ಗ್ರಾಮಸ್ಥರ ವಿರೋಧ ಇದ್ದು, ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಮ್ಮ ಭೂಮಿ ನಮ್ಮ ಹಕ್ಕು. ಕಟ್ಟಡ ನಿರ್ಮಾಣಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಗ್ರಾಮ ಆಡಳಿತಾಧಿಕಾರಿ ಅವರು ಕುರಿಗಾಹಿಗಳಿಗೆ ನಿಂದನೆ ಮಾಡಿದ್ದಾರೆ ಅವರನ್ನು ವಜಾ ಮಾಡುವಂತೆ ತಹಶೀಲ್ದಾರ್ ಅವರಿಗೆ ನೀಡಿರುವ ಮನವಿಯಲ್ಲಿ ಆಗ್ರಹಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಎಂ.ಆರ್.ಮಹೇಶ, ದಲಿತ ಸಂಘಟನೆ ಮುಖಂಡ ಗುಡದಯ್ಯ, ಮುಖಂಡರಾದ ಎಸ್.ಗುರುಮೂರ್ತಿ, ಸಿದ್ದೇಶ, ಎಚ್.ಚಿಕ್ಕಪ್ಪ, sಸ್ಪೂರ್ತಿ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಗ್ರಾಮಸ್ಥರು ಕೊಟ್ಟಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿಕೊಡಲಾಗುವುದು, ಅಂತಿಮವಾಗಿ ಮೇಲಾಧಿಕಾರಿಗಳ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.

Leave a Reply

Your email address will not be published. Required fields are marked *