ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಶಾಮನೂರು ಅವರ ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ಅವಹೇಳನಕಾರಿಯಾಗಿ ವೈಯಕ್ತಿಕವಾಗಿ ಟೀಕೆ ಮಾಡುವುದು ಸರಿಯಲ್ಲ. ಸಚಿವರು, ಸಂಸದರು ಮತ್ತು ಶಾಸಕರ ಬಗ್ಗೆ ಆರೋಪಿಸುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಮುಖಂಡರಾದ ಯಶವಂತರಾವ್ ಜಾಧವ್ ಸೇರಿದಂತೆ ಕೆಲ ನಾಯಕರು ಆರೋಪ ಮಾಡುವ ಮೊದಲು ಸತ್ಯಾಸತ್ಯತೆ ತಿಳಿಯಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿರುವ ಎಸ್ ಎಸ್ ಎಂ ಕುಟುಂಬ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ವೈಯಕ್ತಿಕವಾಗಿ, ಅಸಭ್ಯ ಭಾಷೆ ಬಳಸುವುದು ರಾಜಕಾರಣದಲ್ಲಿ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಆಗ ಬಿಜೆಪಿ ರಾಷ್ಟ್ರಾಧ್ಯಕ್ಷ ಆಗಿದ್ದ ಅಮಿತ್ ಶಾ ಅವರೇ ಯಡಿಯೂರಪ್ಪ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದೇಶದಲ್ಲಿ ನಂಬರ್ ಒನ್ ಭ್ರಷ್ಟ ಸರ್ಕಾರ ಎಂದು ಹೇಳಿದ್ದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೃಷ್ಣಯ್ಯ ಶೆಟ್ಟಿ, ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರ್ಕಾರವು ಜನಪ್ರಿಯತೆ ಗಳಿಸಿದೆ. ದಿನೇ ದಿನೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತತ್ತರಿಸಿ ಹೋಗಿರುವ ಬಿಜೆಪಿಗರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ದಾವಣಗೆರೆಯಲ್ಲಿ ಯಾವ ರೀತಿ ಆಡಳಿತ ನಡೆಸಿದರು, ಯಾವ ರೀತಿ ಕಾಮಗಾರಿ ನಡೆಸಿದರು? ಅಶೋಕ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿಯ ಮೇಲ್ಸೇತುವೆ, ಖಾಸಗಿ ಬಸ್ ನಿಲ್ದಾಣ ನೋಡಿದರೆ ಗೊತ್ತಾಗುತ್ತದೆ. ಅಧಿಕಾರದಲ್ಲಿದ್ದಾಗ ಹಣ ಲೂಟಿ ಹೊಡೆಯುವುದರಲ್ಲಿ ಬಿಜೆಪಿ ನಾಯಕರು ಮಗ್ನರಾಗಿದ್ದರೇ ವಿನಾಃ ಅಭಿವೃದ್ಧಿ ಬಗ್ಗೆ ಯೋಚಿಸಲೇ ಇಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ನಾಚಿಕೆಯಾಗಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಹೇಳಿದ್ದಾರೆ.

