ದಾವಣಗೆರೆ: ನಗರದ ಮಿಲ್ಲತ್ ಸಂಸ್ಥೆಯ ಎಲೈಟ್ ಪಬ್ಲಿಕ್ ಶಾಲೆಯ ವತಿಯಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 59ನೇ ಜನ್ಮದಿನೋತ್ಸವದ ಅಂಗವಾಗಿ ನಗರದ ಮಿಲತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಮಿಲ್ಲತ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳೂ ಆದ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು, ಎಸ್. ಎಸ್. ಮಲ್ಲಿಕಾರ್ಜುನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ವಿದ್ಯಾಕಾಶಿ ಎಂದು ದಾವಣಗೆರೆಗೆ ಹೆಸರು ಬರಲು ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ ಅವರೇ ಕಾರಣ. ಮಲ್ಲಿಕಾರ್ಜುನ್ ಅವರ ದೂರದೃಷ್ಟಿತ್ವ, ಅಭಿವೃದ್ಧಿ ಪರ ರಾಜಕಾರಣ ಎಲ್ಲರಿಗೂ ಮಾದರಿ ಎಂದು ಹೇಳಿದರು.
ಮಕ್ಕಳಲ್ಲಿ ಅಡಗಿರುವ ಸೃಜನಶೀಲತೆ ಮತ್ತು ಕಲಾತ್ಮಕ ಪ್ರತಿಭೆಯನ್ನು ಹೊರತರಲು ಇಂತಹ ಸ್ಪರ್ಧೆಗಳು ಅತ್ಯಂತ ಪೂರಕವಾಗಿವೆ. ಮಕ್ಕಳು ಉತ್ಸಾಹಭರಿತರಾಗಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ಸಂತಸ ತಂದಿದೆ ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ಎಲೈಟ್ ಪಬ್ಲಿಕ್ ಶಾಲೆಯ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಮ್ಮ ಕುಂಚದಲ್ಲಿ ಸುಂದರ ವರ್ಣಚಿತ್ರಗಳನ್ನು ಬಿಡಿಸಿದರು. ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸೈಯದ್ ತಾಜ್, ಫಜ್ಲುರ್ ರೆಹಮಾನ್, ಸಂತೋಷ್, ಎಲೈಟ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕ ವೃಂದ, ಪೋಷಕರು ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.


