ಸಾಸ್ವೆಹಳ್ಳಿ: “ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಜನಪರ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವುದು ಈ ಆಂದೋಲನದ ಮುಖ್ಯ ಉದ್ದೇಶವಾಗಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್ ಹೇಳಿದರು.
ಸಾಸ್ವೆಹಳ್ಳಿ-1ನೇ ಹೋಬಳಿಯ ಹುಣಸಘಟ್ಟ ಗ್ರಾಮದಲ್ಲಿ ಶನಿವಾರ ಪಂಚಾಯಿತಿ ಮಟ್ಟದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಹಶೀಲ್ದಾರ್ ಕವಿರಾಜ್ ಮಾತನಾಡಿ, “ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳಿಗಾಗಿ ಸಾರ್ವಜನಿಕರು ತಾಲ್ಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಆಂದೋಲನ ಸಹಕಾರಿಯಾಗಿದೆ. ಪಿಂಚಣಿ, ಪಹಣಿ ತಿದ್ದುಪಡಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಂತಹ ಅಗತ್ಯ ದಾಖಲೆಗಳು ಹಾಗೂ ಅರ್ಜಿಗಳನ್ನು ಪಂಚಾಯಿತಿ ಮಟ್ಟದಲ್ಲೇ ಸ್ವೀಕರಿಸಿ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು” ಎಂದು ಯೋಜನೆಯ ಕುರಿತು ಮಾಹಿತಿ ನೀಡಿದರು.
ಆಂದೋಲನದಲ್ಲಿ ನಿವೇಶನ ಕೋರಿ 14 ಅರ್ಜಿಗಳು ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ಅರ್ಜಿಗಳು ಸಲ್ಲಿಕೆಯಾದವು.
ಕಾರ್ಯಕ್ರಮದಲ್ಲಿ ಸಾಸ್ವೆಹಳ್ಳಿ ಉಪ ತಹಶೀಲ್ದಾರ್ ಚಂದ್ರಪ್ಪ, ರಾಜಸ್ವ ನಿರೀಕ್ಷಕ ದಿನೇಶ್ ಬಾಬು, ಗ್ರಾಮ ಲೆಕ್ಕಾಧಿಕಾರಿ ವೈ.ಎನ್. ಸಂತೋಷ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *