ಜನರ ಸಮಸ್ಯೆಗಳಿಗೆ ಕಾನೂನಾತ್ಮಕ ಚೌಕಟ್ಟಿನಲ್ಲಿ ತ್ವರಿತ ಪರಿಹಾರ ಒದಗಿಸುವುದೇ ‘ಪ್ರಜಾಸೇವಾ’ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೆ.ಎಸ್. ಬಸವಂತಪ್ಪ ಅವರು ಹೇಳಿದರು.
ಶನಿವಾರ ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿವೇಶನ ರಹಿತ ಅರ್ಹರಿಗೆ 30×40 ಅಳತೆಯ ನಿವೇಶನ: ರಾಜ್ಯದಲ್ಲಿ ಸುಮಾರು 20 ರಿಂದ 25 ಲಕ್ಷ ನಿವೇಶನಗಳನ್ನು ನೀಡುವ ಗುರಿಯಿದ್ದು, ಕ್ಷೇತ್ರದಲ್ಲಿ ಈಗಾಗಲೇ 150 ಎಕರೆ ಜಾಗವನ್ನು ಗುರುತಿಸಲಾಗಿದೆ. ಮುಂದೆ ಇದನ್ನು 500 ಎಕರೆಗೆ ವಿಸ್ತರಿಸಲಾಗುವುದು. ಈ ಹಿಂದೆ ನೀಡುತ್ತಿದ್ದ 20×30 ಅಳತೆಯ ಬದಲಾಗಿ, ಇನ್ನು ಮುಂದೆ ಪ್ರತಿ ಅರ್ಹ ಕುಟುಂಬಕ್ಕೆ 30×40 ಅಳತೆಯ ನಿವೇಶನ ನೀಡಲು ನಿರ್ಧರಿಸಲಾಗಿದೆ ಎಂದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 6 ನೇ ಗ್ಯಾರಂಟಿಯಾಗಿ ‘ಭೂ ಗ್ಯಾರಂಟಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಮನೆ ವಾಸದ ದಾಖಲೆಗಳನ್ನು ಕ್ರಮಬದ್ಧವಾಗಿ ನೋಂದಣಿ ಮಾಡಿಕೊಡುವ ವ್ಯವಸ್ಥೆ ಮಾಡಲಾಗುವುದು. ಗೋಮಾಳ ಹಾಗೂ ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಬಡವರು ಮತ್ತು ಅರ್ಹ ರೈತರಿಗೆ ಮಾತ್ರ ಭೂಮಿ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಬೋರ್ವೆಲ್ ಅಥವಾ ಪೈಪ್ಲೈನ್ ಸೇರಿದಂತೆ ಅಗತ್ಯವಿರುವ ಕಡೆ ಮೊದಲ ಆದ್ಯತೆಯ ಮೇರೆಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 16,000 ಕೋಟಿ ರೂ. ಬೃಹತ್ ಅನುದಾನ ಬಿಡುಗಡೆಯಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗೂ ಹಣ ಹಂಚಿಕೆಯಾಗುತ್ತಿದೆ. ಇದರಿಂದ ಹೊಲದ ರಸ್ತೆಗಳು ಹಾಗೂ ಸಂಪರ್ಕ ರಸ್ತೆಗಳನ್ನು ಗುಣಮಟ್ಟದಲ್ಲಿ ನಿರ್ಮಿಸಲಾಗುವುದು ಎಂದರು.
ಸಾರ್ವಜನಿಕರು ಬಿಳಿ ಹಾಳೆಯಲ್ಲಿ ಅರ್ಜಿ ಸಲ್ಲಿಸುವ ಬದಲು, ಸರ್ಕಾರ ನಿಗದಿಪಡಿಸಿರುವ ಅಧಿಕೃತ ಫಾರ್ಮ್ಗಳಲ್ಲೇ ಸಮಸ್ಯೆಗಳನ್ನು ಬರೆದು ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಗ್ರಾಮಗಳಿಗೆ ಅರ್ಜಿ ನಮೂನೆಗಳನ್ನು ತಲುಪಿಸಿ, ಅಲ್ಲಿಯೇ ಭರ್ತಿ ಮಾಡಿಸುವ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮದ ವ್ಯಾಪಕ ಪ್ರಚಾರಕ್ಕಾಗಿ ಗ್ರಾಮ ಪಂಚಾಯಿತಿಗಳು ಡಂಗುರಾ ಸಾರುವ ಕಾರ್ಯ ಮಾಡಬೇಕು ಎಂದರು.
ಸಾರ್ವಜನಿಕರು ಮತ್ತು ರೈತರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಸರ್ಕಾರಿ ಸೌಲಭ್ಯಗಳನ್ನು ನೇರವಾಗಿ ತಲುಪಿಸಬೇಕು. ಅಲ್ಲದೆ, ಫಸಲ್ ಬಿಮಾ ಪರಿಹಾರ ವಿತರಣೆಯಲ್ಲಿ ಯಾವುದೇ ತಾರತಮ್ಯವಾಗದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋμï ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತಾ ಹೊಸಗೌಡರ್, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಖಾನ್, ತಹಶೀಲ್ದಾರ್ ರಾಜೇಶ್, ತಾಲ್ಲೂಕು ಪಂಚಾಯತ್ ಇಒ ರಾಂಭೋವಿ, ಮುಖಂಡರಾದ ಅಣಜಿ ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

